ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Sunday, 26 June 2011

ಯಾವ ಜನ್ಮದ ಮೈತ್ರಿ / Yaava janmada maitri

ರಚನೆ - ಕುವೆಂಪು
 
ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು 
ನಮ್ಮಿಬ್ಬರನು ಮತ್ತೆ ಬಂಧಿಸಿಹುದೋ ಕಾಣೆ !
ಎಲ್ಲಿದ್ದರೇನಂತೆ ನಿನ್ನನೊಲಿಯದೆ ಮಾಣೆ, 

ಗುರುದೇವನಾಣೆ, ಓ ನನ್ನ ನೆಚ್ಚಿನ ಬಂಧು!  
ವಿಶ್ವ ಜೀವನವೊಂದು ಪಾರವಿಲ್ಲದ ಸಿಂಧು!
ಮೇಲೆ ತೆರೆನೊರೆಯೆದ್ದು ಭೋರ್ಗರೆಯುತಿರೆ ರೇಗಿ,
ಅದರಂತರಾಳದಲಿ ಗುಪ್ತಗಾಮಿನಿಯಾಗಿ;

ಹೃದಯಗಳು ನಲಿಯುತಿವೆ ಪ್ರೇಮ ತೀರ್ಥದಿ ಮಿಂದು!
ಅದರರ್ಥಗಿರ್ಥಗಳು ಸೃಷ್ಟಿಕರ್ತನಿಗಿರಲಿ;
ವ್ಯರ್ಥ ಜಿಜ್ಞಾಸೆಯಲಿ ಕಾಲಹರಣವದೇಕೆ?
ಕುರುಡನಾದಗೆ ದಾರಿಯರ್ಥ ತಿಳಿಯಲೆ ಬೇಕೆ?

ಹಾದಿ ಸಾಗಿದರಾಯ್ತು ಬರುವುದೆಲ್ಲಾ ಬರಲಿ!  
ಬಾರಯ್ಯ, ಮಮಬಂಧು, ಜೀವನಪಥದೊಳಾವು
ಒಂದಾಗಿ ಮುಂದುವರಿಯುವ; ಹಿಂದಿರಲಿ ಸಾವು