ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Saturday, 19 November 2011

ಬೆಳಗು (ಮೂಡಲ ಮನೆಯಾ ಮುತ್ತಿನ ನೀರಿನ) / Moodala maneya muttina neerina


ಮೂಡಲ ಮನೆಯಾ ಮುತ್ತಿನ ನೀರಿನ
ಎರಕSವ ಹೊಯ್ದಾ
ನುಣ್ಣ-ನ್ನೆರಕSವ ಹೊಯ್ದಾ
ಬಾಗಿಲ ತೆರೆದೂ ಬೆಳಕು ಹರಿದೂ
ಜಗವೆಲ್ಲಾ ತೊಯ್ದಾ.
ಹೋಯ್ತೋ-ಜಗವೆಲ್ಲಾ ತೊಯ್ದಾ


ರತ್ನದ ರಸದಾ ಕಾರಂಜೀಯೂ
ಪುಟಪುಟನೇ ಪುಟಿದು
ತಾನೇ-ಪುಟಪುಟನೇ ಪುಟಿದು
ಮಘಮಘಿಸುವಾ ಮುಗಿದ ಮೊಗ್ಗೀ
ಪಟಪಟನೇ ಒಡೆದು
ತಾನೇ-ಪಟಪಟನೇ ಒಡೆದು.


ಎಲೆಗಳ ಮೇಲೆ ಹೂಗಳ ಒಳಗೆ
ಅಮೃತSದ ಬಿಂದು
ಕಂಡವು-ಅಮೃತದ ಬಿಂದು
ಯಾರಿರಿಸಿರುವರು ಮುಗಿಲS ಮೇಲಿಂ-
ದಿಲ್ಲಿಗೇ ತಂದು.
ಈಗ-ಇಲ್ಲಿಗೇ ತಂದು.


ತಂಗಾಳಿಯಾ ಕೈಯೊಳಗಿರಿಸೀ
ಎಸಳೀನಾ ಚವರಿ
ಹೂವಿನ- ಎಸಳೀನಾ ಚವರಿ
ಹಾರಿಸಿಬಿಟ್ಟರು ತುಂಬಿಯ ದಂಡು
ಮೈಯೆಲ್ಲಾ ಸವರಿ
ಗಂಧ-ಮೈಯೆಲ್ಲಾ ಸವರಿ.


ಗಿಡಗಂಟೆಗಳಾ ಕೊರಳೊಳಗಿಂದ
ಹಕ್ಕಿಗಳ ಹಾಡು
ಹೊರಟಿತು-ಹಕ್ಕಿಗಳ ಹಾಡು.
ಗಂಧರ್ವರಾ ಸೀಮೆಯಾಯಿತು
ಕಾಡಿನಾ ನಾಡು
ಕ್ಷಣದೊಳು-ಕಾಡಿನಾ ನಾಡು.


ಕಂಡಿತು ಕಣ್ಣು ಸವಿದಿತು ನಾಲಗೆ
ಪಡೆದೀತೀ ದೇಹ
ಸ್ಪರ್ಶಾ-ಪಡೆದೀತೀ ದೇಹ.
ಕೇಳಿತು ಕಿವಿಯು ಮೂಸಿತು ಮೂಗು
ತನ್ಮಯವೀ ಗೇಹಾ
ದೇವರ-ದೀ ಮನಸಿನ ಗೇಹಾ.


ಅರಿಯದು ಅಳವು ತಿಳಿಯದು ಮನವು
ಕಾಣSದೋ ಬಣ್ಣಾ
ಕಣ್ಣಿಗೆ-ಕಾಣSದೋ ಬಣ್ಣಾ.
ಶಾಂತಿರಸವೇ ಪ್ರೀತಿಯಿಂದಾ
ಮೈದೊರೀತಣ್ಣಾ
ಇದು ಬರಿ-ಬೆಳಗಲ್ಲೋ ಅಣ್ಣಾ.         
                                                      - ಅಂಬಿಕಾತನಯದತ್ತ (ದ. ರಾ. ಬೇಂದ್ರೆ)*


* ವರಕವಿಯ "ಗರಿ" ಕವನಸಂಕಲನದಿ೦ದಾಯ್ದ ಹೊನ್ನ ಗರಿ.                   

No comments:

Post a Comment